ರಾಜ್ಯದಲ್ಲಿ 5 ದಿನ ಚಳಿಯ ಅಬ್ಬರ: ಉ.ಕ ಬೆಳಗಾವಿ,ಗದಗ.ಧಾರವಾಡ,ಭಾಗಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂಜಾನೆ ಮತ್ತು ರಾತ್ರಿ ವೇಳೆ ವಿಪರೀತ ಚಳಿ ಕಂಡುಬರುತ್ತಿದೆ.

ಸ್ನೇಹಜೀವಿ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಚಳಿಗಾಲದ ವಾತಾವರಣ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯದ ಕನಿಷ್ಠ ತಾಪಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇರುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯಕ್ಕೆ ಇರುವ ಚಳಿಯ ವಾತಾವರಣ ಮತ್ತು ಒಣಹವೆಯೇ ಮುಂದಿನ ಕೆಲವು ದಿನಗಳವರೆಗೆ ಮುಂದುವರಿಯಲಿದ್ದು, ಜನರು ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು ಅಗತ್ಯವಾಗಿದೆ.
ಬೆಳಗಾವಿಯಲ್ಲಿ ಅತಿ ಕಡಿಮೆ ತಾಪಮಾನ ದಾಖಲು: ಹವಾಮಾನ ಇಲಾಖೆಯ ವರದಿಯ ಪ್ರಕಾರ, ರಾಜ್ಯದ ಬಯಲು ಪ್ರದೇಶಗಳ ಪೈಕಿ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅತಿ ಕಡಿಮೆ ಅಂದರೆ 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಉತ್ತರ ಕರ್ನಾಟಕದ ಭಾಗಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗಿರುವುದನ್ನು ಈ ಅಂಕಿಅಂಶಗಳು ಸ್ಪಷ್ಟಪಡಿಸುತ್ತವೆ. ಕಳೆದ ಕೆಲವು ದಿನಗಳಿಂದ ಬೆಳಗಾವಿ,ಗದಗ.ಧಾರವಾಡ, ವಿಜಯಪುರ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂಜಾನೆ ಮತ್ತು ರಾತ್ರಿ ವೇಳೆ ವಿಪರೀತ ಚಳಿ ಕಂಡುಬರುತ್ತಿದೆ. ಬೆಳಗಿನ ಜಾವ ದಟ್ಟವಾದ ಮಂಜು ಕವಿಯುವ ವಾತಾವರಣವೂ ನಿರ್ಮಾಣವಾಗಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿಯೂ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಮುಂಜಾನೆ ಮತ್ತು ರಾತ್ರಿ ವೇಳೆ ತಂಪಾದ ವಾತಾವರಣ ಇರಲಿದೆ. ನಗರದಲ್ಲಿ ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದ್ದು, ಕನಿಷ್ಠ ತಾಪಮಾನವು 15 ರಿಂದ 18 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ಚಿಂತಾಮಣಿ, ಮಂಡ್ಯ ಮತ್ತು ಮೈಸೂರಿನಲ್ಲಿಯೂ ಕನಿಷ್ಠ ಉಷ್ಣಾಂಶದಲ್ಲಿ ಇಳಿಕೆಯಾಗಿದ್ದು, ಜನರು ಚಳಿಯಿಂದ ರಕ್ಷಣೆ ಪಡೆಯಲು ಬೆಚ್ಚನೆಯ ಉಡುಪುಗಳ ಮೊರೆ ಹೋಗುತ್ತಿದ್ದಾರೆ.



