ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೈದ್ಯರ ಸೇವೆ ನಿಷೇಧ

ಇನ್ನು ಮುಂದೆ ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳ ರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದು ಹೊರ ರೋಗಿಗಳ ವಿಭಾಗದಲ್ಲಿ ಕರ್ತವ್ಯದ ಅವಧಿ ನಂತರ ಮತ್ತು ನಿಗದಿತ ಕರ್ತವ್ಯಗಳಿಗೆ ಅಡ್ಡಿಯಾಗದಂತೆ ಖಾಸಗಿ ಕ್ಲಿನಿಕ್ ಅಥವಾ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಬಹುದಾಗಿದೆ.

ಸ್ನೇಹಜೀವಿ ನ್ಯೂಸ್

ಬೆಂಗಳೂರು, ಜ. ೨೯- ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳ ರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ಸರ್ಕಾರ ನಿಷೇಧಿಸಿದೆ.

ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದ್ದು, ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೆ ಅಂತಹ ಸರ್ಕಾರಿ ವೈದ್ಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಆದೇಶದಲ್ಲಿ ಹೇಳಲಾಗಿದೆ.

ವಿಧಾನಸಭೆಯಲ್ಲಿಂದು ಪ್ರಶ್ನೋತ್ತರ ಅವಧಿಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ, ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟಿಸ್ ಬಗ್ಗೆ ಕೇಳಲಾದ ಪ್ರಶ್ನೆ ಸಂದರ್ಭದಲ್ಲಿ ಈ ಬಗ್ಗೆ ಸ್ವಯಂ ಹೇಳಿಕೆ ನೀಡಿದ ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್, ಸರ್ಕಾರಿ ವೈದ್ಯರ ಖಾಸಗಿ ಸೇವೆಗಳನ್ನು ನಿಯಂತ್ರಿಸಲು ಸರ್ಕಾರ ಈಗ ಹೊಸ ನಿಯಮವನ್ನು ಜಾರಿ ಮಾಡಿದ್ದು, ಅದರಂತೆ ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಯಲ್ಲಿ ಹೊರ ರೋಗಿಗಳಿಗೆ ಮಾತ್ರ ನೀಡಬಹುದು. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಒಳ ರೋಗಿಗಳಿಗೆ ಸೇವೆ ನೀಡುವಂತಿಲ್ಲ ಎಂದು ಹೇಳಿದರು
ಈ ಬಗ್ಗೆ ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ ಎಂದು ಅವರು ಹೇಳಿದರು.

ಈಗಿರುವ ಸರ್ಕಾರಿ ಆದೇಶಗಳ ಪ್ರಕಾರ ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿ ನಂತರ ಸರ್ಕಾರಿ ಕರ್ತವ್ಯಗಳಿಗೆ ಅಡ್ಡಿಯಾಗದಂತೆ ಖಾಸಗಿಯಾಗಿಯೂ ಸೇವೆ ನೀಡಲು ಅನುಮತಿ ಇದೆ. ಆದರೆ, ಇನ್ನು ಮುಂದೆ ಸರ್ಕಾರಿ ವೈದ್ಯರು ಖಾಸಗಿಯಾಗಿ ಹೊರ ರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಬಹುದಾಗಿದೆ. ಒಳ ರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.

ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಹಾಗಾಗಿ ಸರ್ಕಾರಿ ವೈದ್ಯರು ಈ ಆದೇಶವನ್ನು ಉಲ್ಲಂಘಿಸಿ ಖಾಸಗಿಯಾಗಿ ಒಳ ರೋಗಿಗಳಿಗೆ ಚಿಕಿತ್ಸೆ ನೀಡಿದರೆ ಅವರ ವಿರುದ್ಧ ಕಾನೂನು ಹಾಗೂ ನಾಗರಿಕ ಸೇವಾ ನಿಯಮಗಳಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಒಳ ರೋಗಿಗಳಿಗೆ ನಿರಂತರ ಆರೈಕೆ ಮತ್ತು ನಿಯಮಿತ ಪರೀಕ್ಷೆಯ ಅವಶ್ಯಕತೆ ಇರುತ್ತದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಳ ರೋಗಿಗಳ ಚಿಕಿತ್ಸೆಗೆ ಸರ್ಕಾರಿ ವೈದ್ಯರು ಸೇವೆ ಸಲ್ಲಿಸುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಅವರ ಸೇವೆಯಲ್ಲಿ ವ್ಯತ್ಯಯ ಉಂಟಾಗಿ ರೋಗಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಆ ಕಾರಣದಿಂದ ಸರ್ಕಾರ ಆದೇಶ ಹೊರಡಿಸಿದೆ ಎಂದು ಹೇಳಿದರು.

ಕೇರಳ ಮತ್ತು ಇತರ ರಾಜ್ಯಗಳಲ್ಲಿ ಸರ್ಕಾರಿ ವೈದ್ಯರಿಗೆ ಇದೇ ರೀತಿಯ ನಿರ್ಬಂಧಗಳು ಜಾರಿಯಲ್ಲಿ. ಅಲ್ಲಿ ಕಟ್ಟುನಿಟ್ಟಿನ ಷರತ್ತುಗಳಡಿಯಲ್ಲಿ ಸರ್ಕಾರಿ ವೈದ್ಯರುಗಳಿಗೆ ಖಾಸಗಿ ಸೇವೆಯಲ್ಲಿ ಓಪಿಡಿ ಸೇವೆಗಳಿಗೆ ಮಾತ್ರ ಅನುಮತಿಸಲಾಗಿದೆ ಎಂದು ಅವರು ಹೇಳಿ, ಈ ಎಲ್ಲ ಕಾರಣಗಳಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ವೈದ್ಯರ ಖಾಸಗಿ ಸೇವೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಿಂದಿನ ಎಲ್ಲ ಸೂಚನೆಗಳ ಜತೆಗೆ ಸರ್ಕಾರವು ಈ ಆದೇಶವನ್ನು ಹೊರಡಿಸಿದೆ ಎಂದರು.

ಇನ್ನು ಮುಂದೆ ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳ ರೋಗಿಗಳಿಗೆ ಚಿಕಿತ್ಸೆ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದ್ದು ಹೊರ ರೋಗಿಗಳ ವಿಭಾಗದಲ್ಲಿ ಕರ್ತವ್ಯದ ಅವಧಿ ನಂತರ ಮತ್ತು ನಿಗದಿತ ಕರ್ತವ್ಯಗಳಿಗೆ ಅಡ್ಡಿಯಾಗದಂತೆ ಖಾಸಗಿ ಕ್ಲಿನಿಕ್ ಅಥವಾ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಬಹುದಾಗಿದೆ. ಅದರ ವಿವರಗಳನ್ನು ಸರ್ಕಾರಕ್ಕೆ ಅವರು ಘೋಷಿಸಬೇಕು ಎಂದು ಹೇಳಿದರು.

ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ತನ್ನ ವರದಿಯಲ್ಲಿ ಸಾರ್ವಜನಿಕ ಸೇವಗೆ ಆದ್ಯತೆ ನೀಡಬೇಕಾದರೆ ಸರ್ಕಾರಿ ವೈದ್ಯರ ಖಾಸಗಿ ಸೇವೆಯನ್ನು ನಿಯಂತ್ರಿಸಲು ಶಿಫಾರಸ್ಸು ಮಾಡಿದೆ. ಅದೇ ರೀತಿ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಆರೈಕೆ ನಿರ್ಲಕ್ಷ್ಯದಿಂದ ಹಲವು ಸಮಸ್ಯೆಗಳು ಉಂಟಾದ ನಿದರ್ಶನಗಳಿವೆ. ಕೆಲವು ಸಂದರ್ಭಗಳಲ್ಲಿ ಸಾವಿಗೂ ಕಾರಣವಾಗಿವೆ ಎಂದು ಲೋಕಾಯುಕ್ತರು ತಮ್ಮ ವರದಿಗಳಲ್ಲಿ ಉಲ್ಲೇಖಿಸಿದ್ದಾರೆ. ಈ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಆದೇಶ ಹೊರಡಿಸಿದೆ ಎಂದು ಅವರು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button